ಕಾರವಾರ:
ಉತ್ತರ ಕನ್ನಡ ಜಿಲ್ಲಾಡಳಿತದಿಂದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯುವ 71ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲೆಯ ಎಲ್ಲ ನೌಕರ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಈ ಭಾರಿ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಉದ್ದೇಶಿಸಲಾಗಿದ್ದು ತಮ್ಮ ಇಲಾಖೆ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮುಗಿಸಿಕೊಂಡು ಕಡ್ಡಾಯವಾಗಿ ಎಲ್ಲ ಇಲಾಖೆಯ ಅಧಿಕಾರಿಗಳು, ನೌಕರ ಸಿಬ್ಬಂದಿಗಳು ಪರೇಡ್ ಮೈದಾನದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಕಾರವಾರದಲ್ಲಿ ನಡೆಯುವ ಸ್ವತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲರ ಸಹಭಾಗಿತ್ವ ಅಗತ್ಯ. ಅಂತೆಯೇ ತಾಲೂಕು ಮಟ್ಟದಿಂದಲೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಬೆಳಿಗ್ಗೆ 9 ಗಂಟೆಗೆ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲಾಗುವುದು. ಧ್ವಜಾರೋಹಣ ನಂತರ ಪಥ ಸಂಚಲನ, ಗಣ್ಯರಿಂದ ಗೌರವ ವಂದನೆ ಸ್ವೀಕಾರ, ಮುಖ್ಯ ಅತಿಥಿಗಳಿಂದ ಸ್ವತಂತ್ರ್ಯೋತ್ಸವ ಸಂದೇಶ ಹಾಗು ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಸಂಜೆ ರಂಗಮಂದಿರದಲ್ಲಿ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದ್ದು ಎಲ್ಲ ಕಾರ್ಯಕ್ರಮಗಳನ್ನು ನಿರ್ವಹಿಸಲು ವಹಿಸಲಾದ ಇಲಾಖೆ ಮುಖ್ಯಸ್ಥರು ಯಾವುದೇ ಕೊರತೆ ಇಲ್ಲದಂತೆ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಸ್ವಾತಂತ್ರ್ಯೋತ್ಸವ ಅಂಗವಾಗಿ ಕಾರವಾರ ನಗರವನ್ನು ನಗರಸಭೆಯಿಂದ ಸ್ವಚ್ಚಗೊಳಿಸಬೇಕು. ಸಾರ್ವಜನಿಕರು ಸಂಭ್ರಮದಿಂದ ತಮ್ಮ ಮನೆ ಮುಂಭಾಗದಲ್ಲಿ ಹಬ್ಬದ ರೀತಿಯಲ್ಲಿ ಸಿಂಗರಿಸಬೇಕು. ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ, ಸ್ವಚ್ಚತೆ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಪ್ಲಾಸ್ಟಿಕ್ ಧ್ವಜಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಖಾದಿ ಅಥವಾ ಬಣ್ಣ ಮಾಸದ ಉತ್ತಮ ಗುಣಮಟ್ಟದ ಧ್ವಜಗಳನ್ನು ಬಳಸಬೇಕು. ಧ್ವಜಾರೋಹಣ ಶಿಷ್ಟಾಚಾರ ಪಾಲಿಸದ ಸರ್ಕಾರಿ ಇಲಾಖೆಗಳ ವಿರುದ್ಧ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ಹಾಗೂ ಎಲ್ಲ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Comment