ಕಾರವಾರ: ಹಿರಿಯ ನಾಗರಿಕರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡ ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯರು ಸಮಾಜದ ಆಸ್ತಿ. ನಿಮ್ಮ ಅನುಭವ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ. ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಲದೆ ಹಿರಿಯರು ಕ್ರೀಡೆ, ವ್ಯಾಯಾಮದಂತ ಚಟುವಟಿಕೆಯಲ್ಲಿ ಸದಾ ತೊಡಗಿಕೊಳ್ಳುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯರಾದ ಬಾಬು ಅಂಬೀಗ, ಶ್ರೀಕಾಂತ ನಾಯ್ಕ, ಅರುಣ ರಾಣೆ, ವಸಂತ ಬಾಂದೇಕರ್ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಹಿರಿಯ ನಾಗರಿಕರಿಗೆ ಓಟ, ಶಾಟ್ ಪುಟ್, ಕ್ರಿಕೇಟ್ ಬಾಲ್ ಎಸೆತೆ, ನಡಿಗೆ ಸ್ಫರ್ದೆ ಹಾಗೂ ಜಾನಪದ ಗೀತೆ, ಏಕಪಾತ್ರಾಭಿನಯ ನಡೆಯಿತು.
Leave a Comment