ಕಾರವಾರ:
ಪ್ರತಿ ವರ್ಷದಂತೆ ಈ ವರ್ಷವೂ ಶ್ರಮದಾನ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲಾಡಳಿತ ಗಾಂಧಿ ಜಯಂತಿ ಅಚರಿಸುತ್ತಿದ್ದು ಈ ಬಾರಿ ಮಾಜಾಳಿ ಕಡಲತೀರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ.
ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ವಿಷಯ ತಿಳಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಕಾರ್ಯಕ್ರಮ ಅಂಗವಾಗಿ ಮಾಜಾಳಿ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ ಸಪ್ತಾಹ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದು, ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಅಕ್ಟೋಬರ್ 3ರಂದು ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಲ್ಲಿ ಸ್ವಚ್ಚತಾ ಅಭಿಯಾನ ನಡೆಯಲಿದೆ. ಅಂದು ಎಲ್ಲ ಸರ್ಕಾರಿ ನೌಕರರು ತಮ್ಮ ಕಚೇರಿಗಳು ಹಾಗೂ ಶಾಲೆ ಕಾಲೇಜುಗಳನ್ನು ಸ್ವಚ್ಚಗೊಳಿಸಬೇಕು. ಇದನ್ನು ಅಧಿಕಾರಿಗಳ ಹಂತದಲ್ಲಿ ಖುದ್ದು ಪರಿಶೀಲಿಸಲಾಗುವುದು ಎಂದರು.
ಅಕ್ಟೋಬರ್ 4ರಿಂದ 7ರವರೆಗೆ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗುವುದು ಈ ಸಂದರ್ಭದಲ್ಲಿ ತಮಗೆ ವಹಿಸಿದ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕು. ಅಲ್ಲದೆ ಈ ಕಾರ್ಯಕ್ರಮದಲ್ಲಿ ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದರು.
ಈ ಬಾರಿ ವಿಶೇಷವಾಗಿ ಅಕ್ಟೋಬರ್ 2ರಿಂದ 15ರವರೆಗೆ ಗ್ರಾಮಾಂತರ ಪ್ರದೇಶದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು ಬಯಲು ಬಹಿರ್ದೆಸೆ ತಡೆಗಟ್ಟುವ ನಿಟ್ಟಿನಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಬೇಕೆಂಬ ಅಭಿಯಾನದೊಂದಿಗೆ ಕಾರ್ಯಕ್ರಮಗಳು ಜರುಗಲಿವೆ. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ಮೇರೆಗೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಚಂದ್ರಶೇಖರ್ ನಾಯಕ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಉಪಸ್ಥಿತರಿದ್ದರು.
Leave a Comment