ಕಾರವಾರ: ಕ್ರೀಡಾ ಚಟುವಟಿಕೆಯು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಒತ್ತಡ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ಎಸ್.ನಾಯ್ಕ ಅಭಿಪ್ರಾಯ ಪಟ್ಟರು.
ನಗರದ ಮಾಲಾದೇವಿ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಾಗಿರದೇ ಪಾಲ್ಗೊಳ್ಳುವಿಕೆಯೇ ಮುಖ್ಯವಾಗಿರುತ್ತದೆ ಎಂದರು.
ಅತಿಥಿಯಾಗಿದ್ದ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೊಠಾರಕರ್ ಮಾತನಾಡಿ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ, ಯೋಗಾಸನದಂತಹ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯವಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಒದಗುವ ಸದವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ನಗರಸಭೆ ಅಧ್ಯಕ್ಷ ಗಣಪತಿ ವಿ.ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಸ್ವಾಗತಿಸಿದರು. ದೈಹಿಕ ಶಿಕ್ಷಕ ಮಾಧವ ರಾಣೆ ಕಾರ್ಯಕ್ರಮ ನಿರೂಪಿಸಿದರು. ತಾಲೂಕಾ ದೈಹಿಕ ಪರಿವೀಕ್ಷಕ ಆರ್.ಎಚ್.ನಾಯ್ಕ ವಂದಿಸಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಾಕರ ನಾಯ್ಕ, ಮುಖ್ಯಾಧ್ಯಾಪಕರ ಸಂಘದ ಅಧ್ಯಕ್ಷ ಪ್ರಕಾಶ ಚವ್ಹಾಣ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ನಾಯ್ಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರಮಣ ನಾಯಕ ಮುಂತಾದವರು ಇದ್ದರು. ಅಥ್ಲೆಟಿಕ್ಸ್, ಗುಂಪು ಸ್ಪರ್ಧೆ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು. ಕಾರವಾರ, ಬಾಡ, ಹಳಗಾ, ಸದಾಶಿವಗಡ, ಅಮದಳ್ಳಿ ಮತ್ತು ಕೆರವಡಿ ವಲಯಗಳ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.
Leave a Comment