ಭಟ್ಕಳ: ತಾಲೂಕಿನ ಪುರವರ್ಗದಲ್ಲಿರುವ ಕಿತ್ತೂರು ರಾಣಿ ಚೆನ್ಮಮ್ಮ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶುಕ್ರವಾರ ಶಾಸಕ ಸುನೀಲ ನಾಯ್ಕ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸುನಿಲ್ ನಾಯ್ಕ ಜೀವನದಲ್ಲಿ ಸ್ಪಷ್ಟವಾದ ಗುರಿ ಇದ್ದರೆ ಏನನ್ನೂ ಸಾಧಿಸಬಹುದು. ಗ್ರಾಮೀಣ ಭಾಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ರಾಘವೇಂದ್ರ ಜೋಗಿ ಸೇರಿದಂತೆ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ್ದಾರೆ.

ಸರಕಾರಿ ಶಾಲೆಯಲ್ಲಿ ಕಲಿತವರೇ ಇಂದು ಉನ್ನತ ಹುದ್ದೆಯಲ್ಲಿದ್ದಾರೆ ಎಂದರು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆಯಲ್ಲಿ ಕೆಲ ಮೂಲಭೂತ ಸೌಕರ್ಯಗಳ ಕೊರತೆಯ ಮಧ್ಯೆಯೂ ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿರುವುದು ಶ್ಲಾಘನೀಯ ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆಗಳಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರಿಯಾಂಕಾ ರಾಘವೇಂದ್ರ ಜೋಗಿ, ಶಾಲೆಗೆ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ ತಿಮ್ಮಪ್ಪ ಗೌಡ ಹಾಗೂ ಶಾಲೆಗೆ ತೃತೀಯ ಸ್ಥಾನ ಪಡೆದ ಸಿಂಧು ಮಂಜುನಾಥ ಮೊಗೇರ ಇವರನ್ನು ಗೌರವಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸತಿ ಶಾಲೆಯ ಪ್ರಾಂಶುಪಾಲ ರಮೇಶ. ಕೆ. ನಾಯ್ಕ ವಹಿಸಿದ್ದರು.
ಪಾಲಕ ಪ್ರತಿನಿಧಿ ಮಾಸ್ತಿ ಗೊಂಡ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಎಂ. ಮೊಗೇರ, ಕಟ್ಟಡ ಮಾಲಿಕ ಈರಪ್ಪ ಗರ್ಡಿಕರ್ ಮುಂತಾದವರು ಉಪಸ್ಥಿತರಿದ್ದರು.
Leave a Comment