ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ
ಹೊನ್ನಾವರ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ನೇತ್ರತ್ವದ ಕಾಂಗ್ರೆಸ್ ಸರಕಾರ, ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ ಪಂಚ ಗ್ಯಾರಂಟಿ ಬರವಸೆಗಳನ್ನು ಈಡೇರಿಸಿದ್ದು, ನಾಡಿನ ಜನಸಾಮಾನ್ಯರಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಮ್ಮಡಿಯಾಗುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರುವುದು ನಿಶ್ಚಿತಾ ಎಂದು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ವಿಶ್ವಾಸದಿಂದ ನುಡಿದರು.
ಅವರು ಗುರುವಾರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಮತ್ತು ಜಿಲ್ಲಾ-ತಾಲುಕಾ ಪಂಚಾಯತ್ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಏರ್ಪಡಿಸಲಾದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಪಂಚ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರಕಾರದಿಂದ ಈಡೇರಿಸಲು ಸಾಧ್ಯವೇ ಇಲ್ಲ ಎಂದು ಮೂದಲಿಸುತ್ತಿದ್ದ ವಿರೋಧ ಪಕ್ಷಗಳು, ಈಗ ಬಾಯಿ ಮುಚ್ಚಿ ಕುಳಿತಿದೆ ಎಂದರು. ಸಿದ್ದರಾಮಯ್ಯ ಆಡಳಿತ ದೇಶದಲ್ಲಿಯೇ ಪ್ರಖ್ಯಾತಿ ಪಡೆಯುತ್ತಿದ್ದು, ಗ್ಯಾರಂಟಿ ಯೋಜನೆಗಳು ನಾಡಿನ ಪ್ರತಿ ಕುಟಂಬಗಳಿಗೂ ತಲುಪುತ್ತಿರುವುದರಿಂದ, ಇಂದು ರಾಜ್ಯದ ಜನತೆ ನೆಮ್ಮದಿಯಿಂದ ಬದುಕು ಸಾಗಿಸುವಂತಾಗಿದೆ ಎಂದರು.
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ್ ಗಾಂವಕರ್ ಮಾತನಾಡಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸದೃಡವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಒಟ್ಟೂ ಆರು ಸ್ಥಾನಗಳಲ್ಲಿ, ನಾಲ್ಕರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದೇ ಇದಕ್ಕೆ ಸಾಕ್ಷಿ ಎಂದರು. ಯಾವುದೇ ಕ್ಷಣದಲ್ಲೂ ಜಿಲ್ಲಾ-ತಾಲೂಕು ಪಂಚಾಯತ್ ಚುನಾವಣೆಗಳು ಘೋಷಣೆಯಾಗಬಹುದು. ಅದರಂತೆ ಲೋಕಸಭಾ ಚುನಾವಣೆ ಅವಧಿಗಿಂತ ಮೊದಲೂ ಆಗಬಹುದು. ಕಾರಣ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಈಗಿನಿಂದಲೇ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಪಡಿಸಿ ಚುನಾವಣೆ ಎದುರಿಸಲು ಸನ್ನದ್ಧರಾಗಿರುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ಮಾತನಾಡಿ ನಮ್ಮ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದ್ದು, ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗೆಲ್ಲಬೇಕಾದರೆ, ಹಲವಾರು ವರ್ಷದಿಂದ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ, ಪಕ್ಷದ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಟಿಕೇಟ್ ನೀಡಬೇಕು ಎಂದು ಮನವಿ ಮಾಡಿದರು. ಪಕ್ಷವನ್ನು ಬೂತ್ ಮತ್ತು ಪಂಚಾಯತ್ ಮಟ್ಟದಿಂದ ಪುನರ್ ಸಂಘಟಿಸಲು ಅಕ್ಟೋಬರ್ ತಿಂಗಳಿನಲ್ಲಿ ಗ್ರಾಮೀಣ ಭಾಗಗಳಲ್ಲಿ ಪ್ರವಾಸ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಜಿಲ್ಲಾ ಇಂಟೆಕ್ ಪ್ರಧಾನ ಕಾರ್ಯದರ್ಶಿ ಕೇಶವ ಮೇಸ್ತ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಕಾಂತ್ ಮೇಸ್ತ, ಶ್ರೀಮತಿ ಜ್ಯೋತಿ ಮಹಾಲೆ, ತಿಮ್ಮಪ್ಪಾ ನಾಯ್ಕ ಕಡ್ನೀರು, ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಮೋಹನ್ ಆಚಾರಿ ಇನ್ನೂ ಹಲವರು ಪಕ್ಷದ ಸಂಘಟನೆಯ ಕುರಿತಂತೆ ಮಾತನಾಡಿದರು.
ವೇದಿಕೆಯಲ್ಲಿ ಕೆ.ಪಿ.ಸಿ.ಸಿ.ಸದಸ್ಯ ಎಂ.ಎನ್.ಸುಬ್ರಮಣ್ಯ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಸತೀಶ ನಾಯ್ಕ, ಬಿಸಿಸಿ ಉಪಾಧ್ಯಕ್ಷ ದಾಮೋದರ ನಾಯ್ಕ, ಬ್ಲಾಕ್ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಮಹೇಶ್, ಜಿಲ್ಲಾ ಕಾಂಗ್ರೆಸ್ ಸದಸ್ಯ ಬಾಲಚಂದ್ರ ನಾಯ್ಕ ಉಪಸ್ಥಿತರಿದ್ದರು.ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಚಾರೋಡಿ ವಂದಿಸಿದರು.
Leave a Comment